ಏ ೧೬ ರಿಂದ ೧೯ರವರೆಗೆ ಕೊಡಗಿನಲ್ಲಿ ನಿಷೇಧಾಜ್ಞೆ ಜಾರಿ

No comments

ಏ.16 ರಿಂದ 19 ರವರೆಗೆ ಕೊಡಗಿನಲ್ಲಿ ನಿಷೇಧಾಜ್ಞೆ ಜಾರಿ : ಏ. 18 ರಂದು ಸಂತೆ, ಜಾತ್ರೆಗಳಿಲ್ಲ
ಮಡಿಕೇರಿ ಏ.೧೩ : ಕೊಡಗು ಜಿಲ್ಲೆಯಲ್ಲಿ ಪಾರದರ್ಶಕ, ಸುಗಮ ಮತ್ತು ಶಾಂತಿಯುತವಾಗಿ ಲೋಕಸಭಾ ಸಾರ್ವತ್ರಿಕ ಚುನಾವಣೆಯ ಮತದಾನ ನಡೆಸುವ ಸಂಬಂಧ ಮತ್ತು ಈ ಅವಧಿಯಲ್ಲಿ ಜಿಲ್ಲೆಯಾದ್ಯಂತ ಶಾಂತಿಯುತ ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಏ.೧೬ ರ ಸಂಜೆ ೬ ಗಂಟೆಯಿಂದ ಏ.೧೯ ರ ಸಂಜೆ ೬ ಗಂಟೆಯವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಆದೇಶ ಹೊರಡಿಸಿದ್ದಾರೆ.

ಈ ಅವಧಿಯಲ್ಲಿ ರಾಜಕೀಯ ಪಕ್ಷಗಳ ಅಭ್ಯರ್ಥಿ, ಕಾರ್ಯಕರ್ತರು ಮನೆ ಮನೆಗೆ ತೆರಳಿ ಪಕ್ಷದ ಪರ ಮತಯಾಚನೆ ನಡೆಸುವುದನ್ನು ಹೊರತುಪಡಿಸಿ, ಉಳಿದಂತೆ ಯಾವುದೇ ರಾಜಕೀಯ ಸಭೆ ಸಮಾರಂಭ ನಡೆಸುವುದು, ಪಟಾಕಿ ಸಿಡಿಸುವುದು, ಮೆರವಣಿಗೆ ಇನ್ನಿತರೆ ಕಾರ್ಯಕ್ರಮ ನಡೆಸುವುದು, ಛಾಯಾಗ್ರಹಣ, ದೂರದರ್ಶನ ಅಥವಾ ಇತರ ರೀತಿಯ ಉಪಕರಣಗಳ ಮೂಲಕ ಯಾವುದೇ ಚುನಾವಣಾ ವಿಷಯವನ್ನು ಸಾರ್ವಜನಿಕರಿಗೆ ಪ್ರದರ್ಶಿಸುವುದನ್ನು ನಿಷೇಧಿಸಿದೆ.

ಮಾರಕ ಆಯುಧಗಳನ್ನು ಹೊಂದಿರುವುದು ಅಥವಾ ಹಿಡಿದು ಓಡಾಡುವುದು, ಐದಕ್ಕಿಂತ ಹೆಚ್ಚಿಗೆ ಜನ ಗುಂಪು ಸೇರುವುದು, ಸಂಚರಿಸುವುದು ಮುಂತಾದವುಗಳನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಎಲ್ಲಾ ಮತಗಟ್ಟೆಗಳ ಸುತ್ತಲಿನ ೨೦೦ ಮೀಟರ್ ವ್ಯಾಪ್ತಿಯ ಸ್ಥಳ ನಿರ್ಬಂಧಿತ ಪ್ರದೇಶವಾಗಿದ್ದು, ಈ ಪ್ರದೇಶದಲ್ಲಿ ಖಾಸಗಿ ವಾಹನಗಳ ನಿಲುಗಡೆ, ಧ್ವನಿವರ್ಧಕ ಬಳಕೆ ಮುಂತಾದವುಗಳನ್ನು ನಿಷೇಧಿಸಿದೆ. ಹಾಗೂ ಮತಗಟ್ಟೆಯ ೧೦೦ ಮೀಟರ್ ವ್ಯಾಪ್ತಿಯಲ್ಲಿ ಪಕ್ಷದ ಪ್ರಚಾರ, ಮತದಾರರ ಓಲೈಕೆ ಮಾಡುವಂತಿಲ್ಲ. ಮತದಾನದ ದಿನವಾದ ಏ.೧೮ ರಂದು ಜಿಲ್ಲೆಯಾದ್ಯಂತ ಎಲ್ಲಾ ರೀತಿಯ ಸಂತೆ-ಜಾತ್ರೆಗಳನ್ನು ನಿಷೇಧಿಸಿದೆ.

ಈ ಆದೇಶವು ಸರ್ಕಾರಿ ಕರ್ತವ್ಯದ ನಿಮಿತ್ತ, ಬ್ಯಾಂಕ್, ಎಟಿಎಂ, ಭದ್ರತಾ ಸಿಬ್ಬಂದಿಗಳು ಹಾಗೂ ಮತಗಟ್ಟೆಗಳ ಭದ್ರತಾ ವ್ಯವಸ್ಥೆಗಾಗಿ ನಿಯೋಜಿಸಲ್ಪಟ್ಟ ಅಧಿಕಾರಿ ಮತ್ತು ಸಿಬ್ಬಂದಿಗಳು ಆಯುಧ, ಬಂದೂಕುಗಳನ್ನು ಹೊಂದಿರುವುದಕ್ಕೆ ಅಥವಾ ಬಳಸುವುದಕ್ಕೆ ಅನ್ವಯಿಸುವುದಿಲ್ಲ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.

No comments

Post a Comment