ಮಡಿಕೇರಿ -ವಿವಿಧ ಕಾರಣಗಳಿಂದ ತೆರವಾಗಿರುವ ಗ್ರಾಮ ಪಂಚಾಯತ್ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆಯನ್ನು ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಸುಸೂತ್ರವಾಗಿ ನಡೆಸಲು ಹಾಗೂ ಶಾಂತಿಯುತ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಕರ್ನಾಟಕ ಅಬಕಾರಿ (ಸನ್ನದುಗಳ ಸಾಮಾನ್ಯ ಷರತ್ತುಗಳು) ನಿಯಮಗಳು 1967ರ ನಿಯಮ 10ಬಿ ಅಡಿಯಲ್ಲಿ ಪ್ರತ್ಯಾಯೋಜಿತವಾಗಿರುವ ಅಧಿಕಾರದಂತೆ ಮೇ, 12 ರ ಮಧ್ಯರಾತ್ರಿ 12 ಗಂಟೆಯಿಂದ ಮೇ, 31 ರ ಮಧ್ಯರಾತ್ರಿ 12 ಗಂಟೆಯವರೆಗೆ ಕೊಡಗು ಜಿಲ್ಲೆ ಮಡಿಕೇರಿ ತಾಲ್ಲೂಕಿನ ಸಂಪಾಜೆ, ಮದೆ, ಸೋಮವಾರಪೇಟೆ ತಾಲ್ಲೂಕಿನ ದುಂಡಳ್ಳಿ, ಕೂಡಿಗೆ ಮತ್ತು ವಿರಾಜಪೇಟೆ ತಾಲ್ಲೂಕಿನ ಕಣ್ಣಂಗಾಲ, ಹಾತೂರು ಗ್ರಾಮ ಪಂಚಾಯತ್ ವ್ಯಾಪ್ತಿಗಳಲ್ಲಿ ಎಲ್ಲಾ ವಿಧದ ಮದ್ಯಗಳ ತಯಾರಿಕೆ, ಸಾಗಾಣಿಕೆ, ಶೇಖರಣೆ ಮತ್ತು ಎಲ್ಲಾ ರೀತಿಯ ಅಂಗಡಿ, ಬಾರ್ ಮತ್ತು ರೆಸ್ಟೋರೆಂಟ್, ಕ್ಲಬ್, ಹೋಟೆಲ್‍ಗಳಲ್ಲಿ ಎಲ್ಲಾ ವಿಧದ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಆದೇಶ ಹೊರಡಿಸಿದ್ದಾರೆ.
ನೀತಿ ಸಂಹಿತೆ ಜಾರಿಯಲ್ಲಿರುವ ಅವಧಿಯಲ್ಲಿ ಈ ಪ್ರದೇಶಗಳಲ್ಲಿರುವ ಎಲ್ಲಾ ಮದ್ಯದ ಅಂಗಡಿಗಳನ್ನು ಮತ್ತು ಮದ್ಯ ತಯಾರಿಕಾ ಘಟಕಗಳನ್ನು ಸಂಬಂದಪಟ್ಟ ಮಾಲೀಕರು, ಅದಿಭೋಗದಾರರು ಮತ್ತು ಸಂದರ್ಭಾನುಸಾರ ಮುಚ್ಚತಕ್ಕದ್ದು ಹಾಗೂ ಮೊಹರು ಮಾಡಿ ಕೀಯನ್ನು ಜಿಲ್ಲಾಧಿಕಾರಿಗಳಿಗೆ ಅಥವಾ ಅಧಿಕಾರ ವ್ಯಾಪ್ತಿಯುಳ್ಳ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟರಿಗೆ ಒಪ್ಪಿಸುವುದು.
ನೀತಿ ಸಂಹಿತೆ ಜಾರಿಯಲ್ಲಿರುವ ಅವಧಿಯಲ್ಲಿ ಯಾರಾದರೂ ಮದ್ಯವನ್ನು ಸ್ವಾಧೀನದಲ್ಲಿಟ್ಟುಕೊಂಡಿರುವುದು ಅಥವಾ ಮದ್ಯವನ್ನು ಸೇವಿಸಿ ಬೀದಿಯಲ್ಲಿ ರಂಪಾಟ ಮಾಡುತ್ತಿರುವುದು ಕಂಡುಬಂದರೆ ಮುನ್ನೆಚ್ಚರಿಕಾ ಕ್ರಮವಾಗಿ ಚುನಾವಣೆ ಮುಕ್ತಾಯವಾಗುವವರೆಗೆ ಅಂತಹವರನ್ನು ಕಸ್ಟಡಿಯಲ್ಲಿ ಇಡತಕ್ಕದ್ದು.
ಈ ಆದೇಶವು ಉಪ ಚುನಾವಣೆ ನಡೆಯುವ ಸಂಬಂಧಪಟ್ಟ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮೇ, 12 ರ ಮಧ್ಯರಾತ್ರಿ 12 ಗಂಟೆಯಿಂದ ಮೇ, 31 ರ ಮಧ್ಯರಾತ್ರಿ 12 ಗಂಟೆಯವರೆಗೆ ಅಥವಾ ನೀತಿ ಸಂಹಿತೆ ಜಾರಿಯಲ್ಲಿರುವವರೆಗೆ ಇವುಗಳಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ಮಾತ್ರ ಅನ್ವಯಿಸುತ್ತದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.

No comments
Post a Comment