ರಾಜ್ಯ ಸಚಿವ ಸಂಪುಟ ವಿಸ್ತರಣೆ: ಇಬ್ಬರು ಶಾಸಕರಿಗೆ ಸಚಿವ ಸ್ಥಾನ ಭಾಗ್ಯ 


ಬೆಂಗಳೂರು, ಜೂ.14: ನಿರೀಕ್ಷೆಯಂತೆ ರಾಜ್ಯ 'ಮೈತ್ರಿ' ಸರಕಾರದ ಸಚಿವ ಸಂಪುಟ ಶುಕ್ರವಾರ ಮಧ್ಯಾಹ್ನ ವಿಸ್ತರಣೆಗೊಂಡಿತು. ರಾಣೆಬೆನ್ನೂರು ಶಾಸಕ ಆರ್.ಶಂಕರ್ ಹಾಗೂ ಮುಳುಬಾಗಿಲು ಎಚ್.ನಾಗೇಶ್ ಅವರು ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದ ಗಾಜಿನ ಮನೆಯಲ್ಲಿ ಇಂದು ಮಧ್ಯಾಹ್ನ 1 ಗಂಟೆಗೆ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ವಜುಬಾಯಿ ವಾಲಾ ನೂತನ ಸಚಿವರಿಗೆ ಪ್ರಮಾಣ ವಚನ ಬೋಧಿಸಿದರು. ಈ ಸಂದರ್ಭ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಡಾ.ಜಿಪರಮೇಶ್ವರ್ ಹಾಗೂ ಸಮನ್ವಯ ಸಮಿತಿಯ ಅಧ್ಯಕ್ಷ ಸಿದ್ದರಾಮಯ್ಯ ಸೇರಿದಂತೆ ಹಲವು ಸಚಿವರು ಉಪಸ್ಥಿತರಿದ್ದರು. ಕಾಂಗ್ರೆಸ್ ಸೇರಿದ ಶಂಕರ್: ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವ ಮುನ್ನ ಶಂಕರ್ ಕಾಂಗ್ರೆಸ್ ಪಕ್ಷವನ್ನು ಸೇರಿದರು. ಸಿದ್ದರಾಮಯ್ಯರನ್ನು ಭೇಟಿಯಾದ ಅವರು ತನ್ನ ಪಕ್ಷವಾದ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿ(ಕೆಪಿಜೆಪಿ)ಯನ್ನುಕಾಂಗ್ರೆಸ್ ಪಕ್ಷದಲ್ಲಿ ವಿಲೀನಗೊಳಿಸುವ ಪತ್ರವನ್ನು ನೀಡಿದರು. ಮೂರನೇ ಸ್ಥಾನ ಭರ್ತಿ ಮಾಡುವ ಬಗ್ಗೆ ಜೆಡಿಎಸ್ ಯಾವುದೇ ಸ್ಪಷ್ಟ ನಿರ್ಧಾರಕ್ಕೆ ಬಂದಿಲ್ಲದ ಕಾರಣ ಆ ಪಕ್ಷದ ಒಂದು ಸ್ಥಾನವನ್ನು ಖಾಲಿ ಉಳಿಸಿಕೊಳ್ಳಲಾಗಿದೆ.