ಮಡಿಕೇರಿ: ಚಾಲಕನ ನಿಯಂತ್ರಣ ತಪ್ಪಿ ವಾಹನ ಉರುಳಿಬಿದ್ದ ಪರಿಣಾಮ ಒಂದು ಮಗು ಸಾವನ್ನಪ್ಪಿ ಹಾಗೂ ಹಲವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಸೋಮವಾರಪೇಟೆ ತಾಲೂಕಿನ ಕೋವರ್ಕೊಲ್ಲಿ ಬಳಿ ನಡೆದಿದೆ.
ಸೋಮವಾರಪೇಟೆ-ಮಡಿಕೇರಿ ರಾಜ್ಯ ಹೆದ್ದಾರಿಯ ಕೋವರ್ಕೊಲ್ಲಿ ಸಮೀಪ ನಿನ್ನೆ ರಾತ್ರಿ 9:30ರ ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ. ಬೆಳಗಾವಿ ಮೂಲದ ತಂಡ ವಾಹನದಲ್ಲಿ ಧರ್ಮಸ್ಥಳಕ್ಕೆ ತೀರ್ಥಯಾತ್ರೆಗೆ ಹೊರಟಿದ್ದರು ಎನ್ನಲಾಗ್ತಿದೆ. ವಾಹನದಲ್ಲಿದ್ದ ಆರು ವರ್ಷದ ಹೆಣ್ಣು ಮಗು ಸ್ಥಳದಲ್ಲೇ ಮೃತಪಟ್ಟಿದೆ. ಒಂಬತ್ತು ಮಕ್ಕಳು ಸೇರಿದಂತೆ 17 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಸೋಮವಾರಪೇಟೆ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗೆ ಮಡಿಕೇರಿಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.ಇನ್ನು ತಲೆಗೆ ಗಂಭೀರವಾಗಿ ಗಾಯವಾಗಿರುವ ಇಬ್ಬರು ಮಹಿಳೆಯರ ಸ್ಥಿತಿ ಚಿಂತಾಜನಕವಾಗಿದ್ದು, ಅವರು ಸಾವು-ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ. ಈ ಇಬ್ಬರನ್ನು ಮಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ. ಅಪಘಾತಕ್ಕೆ ಸಂಬಂಧಿಸಿದಂತೆ ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

No comments
Post a Comment