ವಿದ್ಯಾರ್ಥಿಗಳು ಭವಿಷ್ಯದ ಬಗ್ಗೆ ಚಿಂತಿಸಿ: ಸುಮನ್ ಡಿ.ಪೆನ್ನೇಕರ್   

No comments



  • ಮಡಿಕೇರಿ:ವಿದ್ಯಾರ್ಥಿಗಳು ಮಾದಕ ವಸ್ತುಗಳಿಂದ ದೂರವಿರಬೇಕು. ನಾಳೆಯ ಬಗ್ಗೆ ಚಿಂತಿಸುವಂತಾಗಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪೆನ್ನೇಕರ್ ಅವರು ಸಲಹೆ ಮಾಡಿದ್ದಾರೆ. ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಪೊಲೀಸ್ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘ, ಶಕ್ತಿಧಾಮ ಮಾದಕ ವ್ಯಸನಿಗಳ ಸಮಗ್ರ ಪುನರ್ವಸತಿ ಕೇಂದ್ರ, ಗ್ರೀನ್ ಡಾಟ್ ಟ್ರಸ್ಟ್, ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಕಾಲೇಜು ಇವರ ಸಂಯುಕ್ತಾಶ್ರಯದಲ್ಲಿ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಸಭಾಂಗಣದಲ್ಲಿ ಬುಧವಾರ ನಡೆದ ಅಂತರಾಷ್ಟ್ರೀಯ ಮಾದಕ ವಸ್ತುಗಳ ದುರುಪಯೋಗ ಮತ್ತು ಕಾನೂನು ಬಾಹಿರ ಸಾಗಾಟ ವಿರೋಧಿ ದಿನಾಚರಣೆಯು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಮಾದಕ ವಸ್ತುಗಳಾದ ಡ್ರಗ್ಸ್, ಹೆರಾಯಿನ್, ಬ್ರೌನ್ ಶುಗರ್ ಮತ್ತಿತರ ದ್ರವ್ಯಗಳ ಚಟಕ್ಕೆ ತುತ್ತಾಗಬಾರದು, ಯುವ ಜನರು ತಮ್ಮ ಜೀವನವನ್ನು ಹಸನು ಮಾಡಿಕೊಳ್ಳುವತ್ತ ಗಮನ ಹರಿಸಬೇಕು ಎಂದು ತಿಳಿಸಿದರು. ಮಾನವನ ಜೀವನ ಅತ್ಯಂತ ಅಮೂಲ್ಯ, ಆದ್ದರಿಂದ, ಜೀವನದಲ್ಲಿ ಭವಿಷ್ಯದಲ್ಲಿ ಉತ್ತಮ ಗುರಿಯನ್ನು ಸಾಧಿಸಲು ನಿರಂತರ ಪ್ರಯತ್ನಿಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪನ್ನೇಕರ್ ಅವರು ಆಶಯ ವ್ಯಕ್ತಪಡಿಸಿದರು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯರು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ನೂರುನ್ನಿಸ ಅವರು ಮಾತನಾಡಿ ವಿದ್ಯಾರ್ಥಿಗಳು ಅತೀ ಹೆಚ್ಚು ಮಾದಕ ವಸ್ತುಗಳ ಸೇವನೆ ಹಾಗೂ ಹೆಚ್ಚು ಅಪರಾಧಗಳಲ್ಲಿ ತೊಡಗಿರುವುದು ಬೇಸರದ ಸಂಗತಿಯಾಗಿದೆ. ಯುವಜನತೆ ಹಾಗೂ ವಿದ್ಯಾರ್ಥಿಗಳು ಮಾದಕ ವಸ್ತುಗಳಿಂದ ದೂರವಿರಬೇಕು. ಇದರಿಂದ, ಜೀವನ ಉತ್ತಮವಾಗಿರುತ್ತದೆ. ಪೋಷಕರ ಆಸೆ ಆಕಾಂಕ್ಷೆಗಳನ್ನು ಈಡೇರಿಸಲು ವಿದ್ಯಾರ್ಥಿಗಳು ಸತತ ಪ್ರಯತ್ನಿಸಬೇಕು ಎಂದರು. ಮಾದಕ ವಸ್ತುಗಳಿಗೆ ತುತ್ತಾಗಿ ಹಲವರು ಬಲಿಯಾಗುತ್ತಿದ್ದಾರೆ. ಜೊತೆಗೆ ಅಪರಾಧ ಪ್ರಕರಣಗಳಲ್ಲಿಯೂ ತೊಡಗಿಸಿಕೊಳ್ಳುತ್ತಿದ್ದಾರೆ. ಇದು ಒಳ್ಳೆಯ ಬೆಳವಣಿಗೆಯಲ್ಲ. 15 ರಿಂದ 30 ವರ್ಷದೊಳಗಿನ ಯುವಜನರು ಮಾದಕ ವಸ್ತುಗಳಿಗೆ ದಾಸರಾಗುತ್ತಿದ್ದಾರೆ ಎಂದು ಅವರು ಬೇಸರ ವ್ಯಕ್ತಪಡಿಸಿದರು. ವಕೀಲರ ಸಂಘದ ಅಧ್ಯಕ್ಷರಾದ ಕೆ.ಎಸ್.ಕವನ್ ಅವರು ಮಾತನಾಡಿ ವಿದ್ಯಾರ್ಥಿ ಜೀವನದಲ್ಲಿ ವಿದ್ಯಾರ್ಥಿಗಳು ಮಾದಕ ವಸ್ತುಗಳಿಗೆ ಗುರಿಯಾದರೆ ಜೀವನದ ಗುರಿಯನ್ನು ನಾಶ ಪಡಿಸಿಕೊಂಡಂತೆ. ಆದ್ದರಿಂದ, ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳಿಂದಾಗುವ ದುಷ್ಪರಿಣಾಮಗಳ ಬಗ್ಗೆ ಅರಿವಿರಬೇಕು ಎಂದು ಅವರು ತಿಳಿಸಿದರು. ಮನೋವೈದ್ಯರಾದ ಡಾ.ಡೇವಿನ್ ಲಿನೇಕರ್ ಕರ್ಕಡ ಅವರು ಮಾದಕ ವಸ್ತುಗಳ ಬಳಕೆಯಿಂದಾಗುವ ದುಷ್ಪರಿಣಾಮಗಳ ಕುರಿತು ಮಾತನಾಡಿ ಮಾದಕವಸ್ತುಗಳ ಚಟಕ್ಕೆ ದಾಸರಾಗಬೇಡಿ ಎಂದರು. ಮಾದಕ ವಸ್ತುಗಳನ್ನು ಉಪಯೋಗಿಸುವುದರಿಂದ ರಕ್ತ ಸಂಬಂಧಿ ಕಾಯಿಲೆಗಳಾದ ಎಚ್‍ಐವಿ ಏಡ್ಸ್ ಮತ್ತು ಹೆಪಟೈಟಿಸ್, ಮನೋರೋಗ, ಶ್ವಾಸಕೋಶ ಹಾಗೂ ಹೃದಯ ಸಂಬಂಧಿ ಕಾಯಿಲೆಗಳು, ಮೂರ್ಛೆ ಹೋಗುವುದು, ಭ್ರಮೆ ಉಂಟಾಗಬಹುದು ಎಂದರು. ಮಾದಕ ವಸ್ತುಗಳ ಸೇವನೆ ವ್ಯಕ್ತಿಯ ದೈಹಿಕ ಹಾಗೂ ಮಾನಸಿಕ ಸಾಮಥ್ರ್ಯವನ್ನು ಕುಂಠಿತಗೊಳಿಸುತ್ತದೆ. ಮಾದಕ ವಸ್ತುಗಳ ಬಳಕೆಗೆ ಇಳಿದವರು ದೈನಂದಿನ ಚಟುವಟಿಕೆಗಳಲ್ಲಿ ನಿರಾಸಕ್ತಿ, ಅನವಶ್ಯಕ ವಿವಾದಗಳನ್ನು ಸೃಷ್ಠಿಸುವುದು ಮೊದಲಾದ ಸಮಾಜ ವಿರೋಧಿ ಕಾರ್ಯಗಳಲ್ಲಿ ತೊಡಗುವುದು ಕಂಡು ಬರುತ್ತದೆ. ಆದ್ದರಿಂದ ಇದರಿಂದ ದೂರವಿರಬೇಕು ಎಂದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ರಮೇಶ್ ಅವರು ಮಾದಕ ವಸ್ತುಗಳ ಬಳಕೆಯಿಂದಾಗುವ ದುಷ್ಪರಿಣಾಮ ಕುರಿತು ಪ್ರತಿಜ್ಞಾ ವಿಧಿ ಬೋಧಿಸಿದರು. ಉಪ ನಿರೀಕ್ಷಕರಾದ ಕೆ.ಎಸ್.ಸುಂದರ್ ರಾಜ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ.ಕೆ ಮೋಹನ್, ಜಿ.ಪಂ.ಸಹಾಯಕ ಕಾರ್ಯದರ್ಶಿ ಬಾಬು, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅಧಿಕಾರಿ ಡಾ.ಎನ್.ಆನಂದ್, ವಿಕಲಚೇತನರ ಮತ್ತು ಹಿರಿಯ ನಾಗರಿಕ ಸಬಲೀಕರಣ ಅಧಿಕಾರಿ ಆರ್.ಸಂಪತ್ ಕುಮಾರ್, ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲರಾದ ಡಾ.ಟಿ.ಡಿ.ತಿಮ್ಮಯ್ಯ, ಹಾಗೂ ಕಾಲೇಜಿನ ಅಧ್ಯಾಪಕರು, ವಿದ್ಯಾರ್ಥಿಗಳು ಇದ್ದರು. ವಿದ್ಯಾರ್ಥಿನಿ ಲಿಖಿತಾ ಪ್ರಾರ್ಥಿಸಿದರು. ರಾಜಶೇಖರ್ ಸ್ವಾಗತಿಸಿದರು. ಕಾನೂನು ಸೇವಾ ಪ್ರಾಧಿಕಾರದ ಆಡಳಿತ ಸಹಾಯಕರಾದ ಜಯಪ್ಪ ನಿರೂಪಿಸಿ, ವಂದಿಸಿದರು.

No comments

Post a Comment